ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗಾಗಿ ಸರ್ವೆ ಆರಂಭಿಸಿವೆ. ಟಿಕೆಟ್ ಗಾಗಿ ರಾಜಕೀಯ ನಾಯಕರ ಪೈಪೋಟಿ ಹೆಚ್ಚುತ್ತಿದ್ದು, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲಗಳು ಇಲ್ಲ. ಟಿಕೆಟ್ ಹಂಚಿಕೆ ವಿಚಾರವಾಗಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ಈಗಾಗಲೇ ವರದಿ ಕೊಟ್ಟಿದ್ದಾರೆ. ದೆಹಲಿ ನಾಯಕರು, ನಾವು ಕೂಡ ಪ್ರತ್ಯೇಕ ಸರ್ವೆ ಮಾಡಿಸಿದ್ದೇವೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಿರ್ಣಯ ಮಾಡುತ್ತೇವೆ.
ಅರ್ಜಿ ಹಾಕಿದವರಿಗೆಲ್ಲ ಟಿಕೆಟ್ ಸಿಗುತ್ತೆ ಎಂದಲ್ಲ. ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಎಲ್ಲರಿಗೂ ಸ್ಥಾನಮಾನ ನೀಡಲಾಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದರು.
ಟಿಕೆಟ್ ಹಂಚಿಕೆ ಸಂಬಮ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ತಿನಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.