ಬೆಂಗಳೂರು: ಕಾಂಗ್ರೆಸ್ ನಾಯಕರಿಂದ ಈ ಜನ್ಮದಲ್ಲಿ ಮೇಕೆದಾಟು ಯೋಜನೆ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಒಂದು ವೇಳೆ ಏಕಾಂಗಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಮೇಕೆದಾಟು ಯೋಜನೆ ಜಾರಿಗೆ ತರಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ರಾಮನಗರಕ್ಕೆ ಈವರೆಗೂ ಏನೂ ಮಾಡಿಲ್ಲ ರಾಜಕೀಯ ನಾಯಕರಾಗಿ ಅನ್ಯಾಯ ಮಾಡಿದ್ದಾರೆ ಅಷ್ಟೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ದೊಂಬರಾಟ ಮಾಡುತ್ತಿದ್ದಾರೆ. ಕುಡಿಯುವ ನೀರಿಗೂ ರಾಜಕೀಯ ಬಣ್ಣ ಹಚ್ಚುತ್ತಿದ್ದಾರೆ. 75 ವರ್ಷಗಳಿಂದ ಕಾಂಗ್ರೆಸ್ ಗೆ ಮೇಕೆದಾಟು ವಿಚಾರವಾಗಿ ಏನೂ ಮಾಡಲು ಆಗಿಲ್ಲ, ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈಗ ಪಾದಯಾತ್ರೆ ನಾಟಕ ಮಾಡುತ್ತಿದ್ದಾರೆ ಎಂದು ಗುಡುಗಿದರು.
ಮೇಕೆದಾಟು ಯೋಜನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ಕಾಂಗ್ರೆಸ್ ನಾಯಕರು ಹೋರಾಟದ ಹೆಸರಲ್ಲಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದರು.