ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿಯಿಂದ ಸಮನ್ಸ್ ಜಾರಿ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಹಾಗೂ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಇಂದು ರಾಹುಲ್ ಗಾಂಧಿ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕನಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಘ್ನಗೊಳ್ಳುತ್ತಿದ್ದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೇ ಬ್ರಿಟಿಷರಿಂದ ಕಾಂಗ್ರೆಸ್ ಧ್ವನಿ ಹತ್ತಿಕ್ಕಲು ಸಾಧ್ಯವಾಗಿಲ್ಲ. ಈಗ ಬಿಜೆಪಿಯು ಅಂಥದ್ದೇ ಪ್ರಯತ್ನ ಮಾಡುತ್ತಿದೆ. ಆದರೆ ನಮ್ಮ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಯಾರ ಬೆದರಿಕೆಗೂ ನಾವು ಹೆದರುವುದಿಲ್ಲ, ಕುಗ್ಗುವುದೂ ಇಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿಯೇ ‘ಸತ್ಯ ಕಾ ಸಂಗ್ರಾಮ್’ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.