ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಿಎಂ ಹುದ್ದೆಗೆ ನಾವೂ ಅರ್ಹರೇ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ನಾವೆಲ್ಲರೂ ಅರ್ಹರೇ. ಸಿಎಂ ಯಾರಾಗಬೇಕು ಎಂಬುದು ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಎಂದು ಹೇಳಿದರು.
ಚಿತ್ರದುರ್ಗದಲ್ಲಿ ದಲಿತ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ಜನವರಿ 8ರಂದು ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಮೀಸಲಾತಿ ಎಂಬುದು ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು ಎಂದು ಹೇಳಿದರು.