ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿರುವ ನಿರ್ಧಾರವನ್ನು ಖಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕೆಳಮಟ್ಟಕ್ಕೆ ಹೋಗುವ ರಾಜಕಾರಣ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಸದನದಲ್ಲಿ ಚರ್ಚಿಸಲು ಬೇಕಾದಷ್ಟು ವಿಷಯಗಳಿವೆ. ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ. ಆದರೆ ಕಾಂಗ್ರೆಸ್ ಸದಸ್ಯರು ಇದಾವುದಕ್ಕೂ ಅವಕಾಶ ನೀಡದೇ ಕಲಾಪದ ವೇಳೆ ಪ್ರತಿಭಟನೆ ನಡೆಸಿದ್ದಾರೆ. ಈಗ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದ್ದಾರೆ. ಕಾಂಗ್ರೆಸ್ ನವರಿಗೆ ರಾಜ್ಯದ ಜನತೆ ಹಿತಾಸಕ್ತಿಗಿಂತ ರಾಜಕಾರಣವೆ ಮುಖ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಂತಿ-ಸೌಹಾರ್ದತೆ ಕಾಪಾಡುವುದು ನಮ್ಮ ಜವಾಬ್ದಾರಿ. ಸಂಧಾನ ಸಭೆ ನಡೆಸಿ ಧರಣಿ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಿದರೂ ಯಾವುದಕ್ಕೂ ಒಪ್ಪುತ್ತಿಲ್ಲ. ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಇದು ನಿಜಕ್ಕೂ ಕೆಳಮಟ್ಟಕ್ಕೆ ಹೋಗುವ ರಾಜಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದರು.