ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತ್ರತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಸಿಎಂ ನಿವಾಸದತ್ತ ದೌಡಾಯಿಸಿದ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದು, ಈ ವೇಳೆ ರಸ್ತೆ ಮಧ್ಯೆಯೇ ಕುಳಿತು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.