ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದೆ. ಹೊಸ ಸರ್ಕಾರ ರಚನೆಗಾಗಿ ಕಸರತ್ತು ಮುಂದುವರೆದಿದೆ. ಸಿಎಂ ಆಯ್ಕೆ ವಿಚಾರ ತಲೆನೋವಾಗಿ ಪರಿಣಮಿಸಿದೆ.
ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದು, ಅಧಿಕಾರ ಹಂಚಿಕೆ ಸೂತ್ರವನ್ನು ಹೈಕಮಾಂಡ್ ಯೋಜಿಸಿದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ಗಂಟೆಗೆ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ.
ಲೋಕಸಭಾ ಚುನಾವಣೆ ದೃಷ್ಟಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆಗೆ ಹೆಚ್ಚಿನ ಒತ್ತು ಕೊಡುವ ಸಾಧ್ಯತೆ ಇದೆ. ಇಬ್ಬರು ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಲಿದ್ದಾರೆ.