ಬೀದರ್: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ರಾಜ್ಯ ಸರ್ಕಾರವೂ ಹಣ ಸೇರಿಸಿ ನೀಡಲಾರಂಭಿಸಿತು. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯಾಗುತ್ತಿದೆ. ಆದರೆ ಕಾಂಗ್ರೆಸ್ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಸಾಲ ಮನ್ನಾ ಮಾಡುವುದಾಗಿ ಹೇಳಿ ಸುಳ್ಳು ಭರವಸೆ ನೀಡಿತು. ಸಾಲ ಮನ್ನಾ ಮಾಡದೇ ರೈತರಿಗೆ ವಂಚಿಸಿದೆ. ಇದು ಕಾಂಗ್ರೆಸ್ ನ ಅಸಲಿ ಮುಖ ಎಂದು ಕಿಡಿಕಾರಿದರು.
ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ಸ್ಪೀಡ್ ನಲ್ಲಿ ಅಭಿವೃದ್ಧಿ ಸಾಧ್ಯವಾಗಿದೆ. ಬೀದರ್ ನಲ್ಲಿ ಏತನೀರಾವರಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳಿಗೆ ವೇಗದೊರೆತಿದೆ. ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ನೆರವಾಗಿದೆ. ರೈತರ ಸಣ್ಣಪುಟ್ಟ ಖರ್ಚುಗಳಿಗೆ ಸಹಾಯವಾಗುತ್ತಿದೆ. ಈ ಯೋಜನೆ ಜಾರಿಗೆ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಆದರೆ ಮೈತ್ರಿ ಸರ್ಕಾರ ಫಲಾನುಭವಿಗಳ ಪಟ್ಟಿಯನ್ನೂ ಕೇಂದ್ರಕ್ಕೆ ಕೊಡಲಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಟ್ಟಿದೆ. ಬೀದರ್ ನಲ್ಲಿಯೇ 30 ಸಾವಿರ ಮನೆಗಳನ್ನು ಮಹಿಳೆಯ ಹೆಸರಿನಲ್ಲಿ ನಿರ್ಮಿಸಿಕೊಡಲಾಗಿದೆ. ಜಲ್ ಜೀವವನ್ ಮಿಷಿನ್ ಯೋಜನೆಯಡಿ ದೇಶದಲ್ಲಿ 9 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಹಿಂದುಳಿದ ವರ್ಗದವರಿಗೆ ಭೂಮಿ ಹಕ್ಕು, ಮೀಸಲಾತಿ ನೀಡಿದ್ದು ಬಿಜೆಪಿ ಸರ್ಕಾರ. ಆದರೆ ಕಾಂಗ್ರೆಸ್ ಪಕ್ಷ ಜಾತಿ ಹೆಸರಲ್ಲಿ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಕಾಂಗ್ರೆಸ್ ಅಡ್ಡಿಯುಂಟು ಮಾಡುತ್ತಿದೆ ಎಂದು ಕಿಡಿಕಾರಿದರು.