ಸುರಪುರ: ಬಿಜೆಪಿ ಶಾಸಕ ರಾಜುಗೌಡ ತವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲುತೂರಾಟ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ್ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. 40 ಕಾರುಗಳಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ಹಾರ್ನ್ ಹಾಕಿದ್ದರು. ಇದೇ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಾರ್ನ್ ಮಾಡಿದ್ದಕ್ಕೆ ಸ್ಥಳೀಯರು ಗರಂ ಆಗಿದ್ದಾರೆ. ಹಾರ್ನ್ ಹಾಕದೇ ಸೈಲೆಂಟ್ ಆಗಿ ಹೋಗಿ ಎಂದು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಕೈ ಮುಖಂಡರ ಕಾರುಗಳ ಮೇಲೆ ಕಲ್ಲು ತೂರಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.