ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದರೆ, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಮಳೆಯ ನಡುವೆ ಪ್ರತಿಭಟನೆಯ ಬಿಸಿ ತಟ್ಟಲಿದೆ.
ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಲಿದ್ದು, ಅದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಆನಂದ್ ರಾವ್ ಸರ್ಕಲ್ ಹಾಗೂ ಮೌರ್ಯ ವೃತ್ತದಲ್ಲಿ ಧರಣಿ ನಡೆಸಲಿದ್ದಾರೆ. ಎರಡೂ ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೀಜಿಸಲಾಗಿದೆ.
ಡಿಸಿಪಿಗಳಾದ ಶ್ರೀನಿವಾಸ್ ಗೌಡ, ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ 6 ಎಸಿಪಿಗಳು, 25 ಪಿಎಸ್ ಐ, 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಬಿಜೆಪಿ ಮುಖಂಡರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಮೆಜೆಸ್ಟಿಕ್ ನಿಂದ ಕೆ.ಆರ್.ಸರ್ಕಲ್ ವರೆಗೆ ಟ್ರಾಫಿಕ್ ಜಾಮ್ ಆಗುವ ಸಂಭವವಿದ್ದು, ಮುಂಜಾಗೃತಾ ಕ್ರಮವಾಗಿ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಸಂಚಾರ ದಟ್ಟಣೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಲಾಗಿದೆ.