ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಯಾರೂ ಊಹಿಸದ ಬೆಳವಣಿಗೆಗಳ ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಕಡೆ ಮುಖ ಮಾಡಿದ್ದು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೇ ಕೈ ಪಾಳೆಯ ಸೇರ್ಪಡೆಗೊಂಡು ಅಥಣಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.
40 ವರ್ಷಗಳ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ತಮಗೆ ಟಿಕೆಟ್ ಸಿಗುವುದಿಲ್ಲವೆಂಬುದು ಖಚಿತವಾಗುತ್ತಿದ್ದಂತೆ ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದಿದ್ದಾರೆ. ಈಗಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದು, ಬಹುತೇಕ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಇದರ ಮಧ್ಯೆ ಉತ್ತರ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಬಿಜೆಪಿ ನಾಯಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೌದು, ಕೆಎಲ್ಇ ಸಂಸ್ಥೆಯ ಮುಖ್ಯಸ್ಥ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ ಕೋರೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ. ಕುತೂಹಲಕರ ಸಂಗತಿ ಎಂದರೆ ಶೆಟ್ಟರ್ ಪಕ್ಷ ತೊರೆದಿರುವುದಕ್ಕೆ ಎಲ್ಲ ನಾಯಕರು ಯಾವುದೇ ನಷ್ಟವಿಲ್ಲ ಎಂದು ಹೇಳುತ್ತಿದ್ದರೆ ಪ್ರಭಾಕರ ಕೋರೆ ಮಾತ್ರ ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ನಷ್ಟವಾಗಲಿದೆ ಎಂದು ಹೇಳಿದ್ದಾರೆ.