ಬೆಳಗಾವಿ: ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ವಕೀಲರು ಪ್ರತಿಭಟನೆ ತೀವ್ರಗೊಳಿಸಿದ್ದು, ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ವಕೀಲರ ಸಂರಕ್ಷಣಾ ವಿಧೇಯಕ ಅಂಗೀಕಾರಕ್ಕೆ ಆಗ್ರಹಿಸಿ ವಕೀಲರ ಸಂಘ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದು, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾ ನಿರತ ವಕೀಲರನ್ನು ಬೆಳಗಾವಿ ಪೊಲೀಸ್ ಆಯುಕ್ತ ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ.
ಈ ವೇಳೆ ವಕೀಲರು ಬ್ಯಾರಿಕೇಡ್ ಗಳನ್ನು ಕಿತ್ತೆಸೆದು, ಪಕ್ಕದ ಜಮೀನಿನ ಮೂಲಕವಾಗಿ ಸಾಗಿ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ವಿಧಾನಸೌಧದ ಮುಂಭಾಗ ಪೊಲೀಸರು ಹಾಗೂ ವಕೀಲರ ನಡುವೆ ಜಟಾಪಟಿ ನಡೆದಿದ್ದು, ವಕೀಲರು ವಿಧಾನಸೌಧಕ್ಕೆ ತೆರಳಲು ನಮಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.