ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ ಬೆನ್ನಲ್ಲೇ ತಮ್ಮ ಇಲಾಖೆಯಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಸಿಎಂ ಬದಲಾವಣೆ ನಿಟ್ಟಿನಲ್ಲಿ ಯೋಗೇಶ್ವರ್ ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬೆಳವಣಿಗೆಗಳ ನಡುವೆಯೇ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಯೋಗೇಶ್ವರ್ ವಿರುದ್ಧ ಹಲವು ಶಾಸಕರು ಸಹಿ ಸಂಗ್ರಹವನ್ನೂ ನಡೆಸಿದ್ದರು. ರಾಜಕೀಯ ಬೆಳವಣಿಗಳ ಮಧ್ಯೆ ಇದೀಗ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗಾಗಿ ಸಮಯ ಕೇಳಿದ್ದಾಗಿ ತಿಳಿದು ಬಂದಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ ಇದು ಯಾವುದೇ ನಿಗದಿತ ರಾಜಕೀಯಭೇಟಿಯಲ್ಲ. ಸಧ್ಯ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳೂ ನಡೆಯುತ್ತಿಲ್ಲ. ಬೇರೆ ಕಾರಣಗಳಿಗಾಗಿ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಆಪ್ತರೊಂದಿಗೆ ವಿಜಯೇಂದ್ರ ದೆಹಲಿ ಪ್ರಯಾಣ ತೀವ್ರ ಕುತೂಹಲವನ್ನು ಮೂಡಿಸಿದೆ.