ಮೈಸೂರು: ರಿಮೋಟ್ ಕಂಟ್ರೋಲ್ ಸಿಎಂ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷರಾಗಿಯೇ ಅವರಿಗೆ ಕೆಲಸ ನಿರ್ವಹಿಸಲು ಆಗುತ್ತಿಲ್ಲ, ಸಿಎಂ ಹುದ್ದೆ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿ ವರ್ಧಂತಿ ಉತ್ಸವದಲ್ಲಿ ಭಾಗಿಯಾದ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆಶಿ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್ ನವರೇ ಅವರಿಗೆ ಬಿಡುತ್ತಿಲ್ಲ. ಅಧ್ಯಕ್ಷ ಸ್ಥಾನ ಕೆಲಸ ಮಾಡುವುದು ಅವರಿಗೆ ಕಷ್ಟವಾಗಿದೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ರೇಸ್ ಗಾಗಿ ಸ್ಪರ್ಧೆ ಇದೆ. ಇಬ್ಬರೂ ನಾನೊಂದು ತೀರ ನೀನೊಂದು ತೀರ ಎಂಬಂತಾಗಿದೆ. ಚುನಾವಣೆಗೂ ಮುನ್ನವೇ ಇಬ್ಬರು ಪೈಪೋಟಿ ನಡೆಸಿದ್ದಾರೆ ಎಂದು ಹೇಳಿದರು.