ಬೆಂಗಳೂರು: ಕೆ.ಆರ್. ಪುರ ಇನ್ಸ್ ಪೆಕ್ಟರ್ ನಂದೀಶ್ ಹಣ ಕೊಟ್ಟು ಬಂದಿದ್ದಾರೆ ಎಂಬ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಎಂಟಿಬಿ ನಾಗರಾಜ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದ ಅಮಾನತುಗೊಂಡಿದ್ದ ಕೆ.ಆರ್. ಪುರ ಇನ್ಸ್ ಪೆಕ್ಟರ್ ನಂದೀಶ್ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ನಂದೀಶ್ 70-80 ಲಕ್ಷ ರೂಪಾಯಿ ಹಣ ಕೊಟ್ಟು ವರ್ಗಾವಣೆ ಮಾಡಿಸಿಕೊಂಡಿದ್ದರು ಎಂಬ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಸಚಿವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ ಮಾಹಿತಿ ಪಡೆದುಕೊಳ್ಳುತ್ತೇನೆ. ಲೋಕಾಯುಕ್ತಕ್ಕೆ ದೂರು ನೀಡಿದರೆ ತನಿಖೆಯಾಗಲಿದೆ. ಲೋಕಾಯುಕ್ತ ತನಿಖೆಯಲ್ಲಿ ನಾವು ಮೂಗು ತೂರಿಸುವುದಿಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಕ್ಲಬ್, ಪಬ್ ಗಳು ತೆರೆದಿರುತ್ತವೆ. ಮೊದಲಿನಿಂದಲೂ ಇದರ ವಿರುದ್ಧ ಕ್ರಮಕ್ಕೆ ನಾನು ಬದ್ಧನಾಗಿದ್ದೇನೆ. ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಹೀಗಾಗಿ ನಂದೀಶ್ ಅಮಾನತುಗೊಂಡಿದ್ದರು. ಪೊಲೀಸ್ ಆಯುಕ್ತರು ನಂದೀಶ್ ಅವರನ್ನು ಅಮಾನತುಗೊಳಿಸಿ ಆದೇಶ ನೀಡಿದ್ದರು. ಆದರೆ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂದೀಶ್ ಸಾವಿಗೆ ಬೇರೆ ಯಾವುದೋ ಅರ್ಥ ಕಲ್ಪಿಸುವುದು ಬೇಡ ಎಂದರು.
ಇದೇ ವೇಳೆ ಪತ್ರಕರ್ತರಿಗೆ ಸಿಎಂ ಕಚೇರಿಯಿಂದಲೇ ಲಂಚ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿಯೇ ಇಲ್ಲ ಎಂದು ಹೇಳಿದರು.