alex Certify BIG NEWS: ಕೇಂದ್ರ ನಾಯಕರ ಓಲೈಕೆಗಾಗಿ ಹಿಂದಿ ಮೆರೆಸಿ ಕನ್ನಡ-ಕನ್ನಡಿಗರಿಗೆ ಅವಮಾನ; ಕನ್ನಡ ಸಂಸ್ಕೃತಿ ಇಲಾಖೆ ಜಾಲತಾಣದಲ್ಲೂ ಹಿಂದಿ ಕಿರೀಟ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ನಾಯಕರ ಓಲೈಕೆಗಾಗಿ ಹಿಂದಿ ಮೆರೆಸಿ ಕನ್ನಡ-ಕನ್ನಡಿಗರಿಗೆ ಅವಮಾನ; ಕನ್ನಡ ಸಂಸ್ಕೃತಿ ಇಲಾಖೆ ಜಾಲತಾಣದಲ್ಲೂ ಹಿಂದಿ ಕಿರೀಟ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ.

ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ.
ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ.

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಸಿಎಂ ಬೊಮ್ಮಾಯಿ ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಕಾರ್ಕಳ ಸುನೀಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು..!! ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...