ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ವೇದಿಕೆಯಲ್ಲಿ ಅನ್ನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಯಾರೂ ಕೂಡ ಊಟಕ್ಕಾಗಿ ಪರಿತಪಿಸಬಾರದು ಎಂಬ ಉದ್ದೇಶದಿದ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದೆವು. ರಾಜ್ಯದ ಜನರಿಗೆ 5 ಕೆಜಿ ಅಕ್ಕಿ ಕೊಡುವ ಶಕ್ತಿ ನಮಗಿದೆ. ಆದರೆ 10 ಕೆಜಿ ಕೊಡುವಷ್ಟು ಇಲ್ಲ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಅಕ್ಕಿ ನೀಡುವಂತೆ ಕೇಳಿದ್ದೆವು. ಆರಂಭದಲ್ಲಿ ಅಕ್ಕಿ ಕೊಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಈಗ ರಾಜಕೀಯ ಮಾಡುತ್ತಿದೆ. ಈಗ ಅಕ್ಕಿ ಕೊಡುವುದಿಲ್ಲ ಎಂದು ಹೇಳುತ್ತಿದೆ. ಈವರೆಗೆ ಕೇಂದ್ರ ಸರ್ಕಾರ 1 ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ಹಿಂದೆ ಸಿಎಂ ಸಿದ್ದರಾಮಯ್ಯ 7 ಕೆಜಿ ಅಕ್ಕಿ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಸಿತು. ಜನರ ಮೂಲಭೂತ ಬೇಡಿಕೆಯಾದ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಗುಡುಗಿದರು.