ಬೆಳಗಾವಿ: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ವಿತರಿಸಲು ನಿರಾಕರಿಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೇಂದ್ರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಡ್ಡಿ ಪಡಿಸುತ್ತಿದೆ. ಅರ್ಜಿ ಸಲ್ಲಿಕೆಗೂ ಸಿಸ್ಟಮ್ ಹ್ಯಾಕ್ ಮಾಡಿಸಿ ಸಮಸ್ಯೆಯುಂಟು ಮಾಡಿದೆ. ಕೇಂದ್ರ ಸರ್ಕಾರ ನಮ್ಮ ಸಿಸ್ಟಮ್ ಹ್ಯಾಕ್ ಮಾಡಿದೆ. ಹಾಗಾಗಿ ಸರ್ವರ್ ಡೌನ್ ಆಗುತ್ತಿದೆ ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಸ್ಟಮ್ ನ್ನು ಕೇಂದ್ರ ಹ್ಯಾಕ್ ಮಾಡಿದೆ. ಹಾಗಾಗಿ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿದೆ. ಎಷ್ಟೇ ಹ್ಯಾಕ್ ಮಾಡಿದರೂ ನಾವು ಘೋಷಣೆ ಮಾಡಿದ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದರು.