ಬೆಂಗಳೂರು : ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ರಜೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಆರಂಭದಲ್ಲಿ ಶಿಕ್ಷಣ ಇಲಾಖೆಯು ಜ. 19ರ ವರೆಗೆ ಬೆಂಗಳೂರಿನಲ್ಲಿನ 1 ರಿಂದ 9ನೇ ತರಗತಿಯವರೆಗಿನ ಶಾಲೆಗಳಿಗೆ ರಜೆ ಘೋಷಿಸಿತ್ತು. ಆದರೆ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ವಿಸ್ತರಿಸಲಾಗಿದೆ.
ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೂ ಬೆಂಗಳೂರಿನಲ್ಲಿ 10 ರಿಂದ 12ನೇ ತರಗತಿಯವರೆಗಿನ ತರಗತಿಗಳು ನಡೆಯುತ್ತಿವೆ. ಆದರೆ, ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಸೂಚಿಸುವಂತೆ ಅಧಿಕಾರಿಗಳಿಗೆ ಹಾಗೂ ಶಾಲಾ – ಕಾಲೇಜು ಸಿಬ್ಬಂದಿಗೆ ಸೂಚಿಸಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ದಿನಗಳಲ್ಲಿ 10 ರಿಂದ 12ನೇ ತರಗತಿಯವರೆಗಿನ ತರಗತಿಗಳನ್ನು ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರು ನಗರ ಹೊರತು ಪಡಿಸಿದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಆದರೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನುಳಿದಂತೆ ರಾಜ್ಯದ ಇನ್ನಿತರ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಹೆಚ್ಚಾದರೆ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.