
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಇದರಿಂದಾಗಿ ಸಿದ್ದರಾಮಯ್ಯನವರನ್ನು ಕೋಲಾರದಿಂದ ಕಣಕ್ಕಿಳಿಸಲು ಆಸಕ್ತಿ ವಹಿಸಿದ್ದ ರಮೇಶ್ ಕುಮಾರ್ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೆಲಿಕಾಪ್ಟರ್ ಮೂಲಕ ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿರುವ ರಮೇಶ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಸುರ್ಜೆವಾಲಾ ಅವರಿಗೆ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಸಾಥ್ ನೀಡಿದ್ದರು.
ರಮೇಶ್ ಕುಮಾರ್ ನಿವಾಸದಲ್ಲಿ ಅವರೊಂದಿಗೆ ಸುರ್ಜೆವಾಲಾ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಸಿದ್ದರಾಮಯ್ಯ ಸ್ಪರ್ಧಿಸದೆ ಇರಲು ತೀರ್ಮಾನ ಕೈಗೊಂಡಿದ್ದರ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಿದ್ದರಾಮಯ್ಯನವರಿಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟರೆ ತಪ್ಪು ಸಂದೇಶ ರವಾನೆಯಾಗಬಹುದು ಎಂದು ಹೇಳಿದ್ದಾರೆ ಎನ್ನಲಾಗಿದೆ.