ಕ್ರಿಮಿನಲ್ ಪ್ರಕರಣಗಳ ವಿಚಾರಣೆ ರದ್ದುಪಡಿಸುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಅಧಿಕಾರವನ್ನು ಅಪರೂಪದ ಪ್ರಕರಣಗಳಲ್ಲಿ ಮಾತ್ರ ಬಳಸಬೇಕು. ಅಪರೂಪದಲ್ಲಿ ಅಪರೂಪ ಎಂಬ ಪ್ರಕರಣಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ವಂಚನೆ, ನಕಲಿ ದಾಖಲೆ ಸೃಷ್ಟಿ ಕುರಿತ ಪ್ರಕರಣವನ್ನು ದುರುದ್ದೇಶದಿಂದ ದಾಖಲಿಸಲಾಗಿದೆ. ಇದನ್ನು ರದ್ದುಪಡಿಸುವಂತೆ ಕೋರಿ ಮೂವರು ವ್ಯಕ್ತಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಎಸ್. ರವೀಂದ್ರ ಭಟ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣವನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಪ್ರಕರಣ ದಾಖಲಿಸಿರುವುದು ಸ್ಪಷ್ಟವಾಗುತ್ತದೆ. ಇಂತಹ ಅಪರೂಪದ ಪ್ರಕರಣಗಳಲ್ಲಿ ಮಾತ್ರ ವಿಚಾರಣೆಯನ್ನು ರದ್ದುಪಡಿಸಲು ದತ್ತವಾಗಿರುವ ಅಧಿಕಾರವನ್ನು ಬಳಸಬಹುದಾಗಿದೆ ಎಂದು ತಿಳಿಸಿದ್ದಾರೆ.