ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆತಂಕ ಎದುರಾಗಿದೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಕಟ್ಟು ನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವವರಿಗೆ ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಅಥವಾ ಎರಡು ಬಾರಿ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.
ಕೊರೊನಾ ಸೋಂಕಿನ ಬಗ್ಗೆ ಮತ್ತೆ ಭವಿಷ್ಯ ನುಡಿದ ಕೋಡಿಮಠದ ಶ್ರೀ
ಈ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಈಗಗಾಲೇ ಆದೇಶ ಹೊರಡಿಸಿದ್ದು, ಪ್ರಮುಖವಾಗಿ ಚಾಮರಾಜನಗರ ಜಿಲ್ಲೆಯ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬರ ಥರ್ಮಲ್ ಸ್ಕ್ರೀನಿಂಗ್ ಹಾಗೂ ನೆಗೆಟಿವ್ ರಿಪೊರ್ಟ್ ಪರಿಶೀಲಿಸಲಾಗುತ್ತಿದೆ. ಒಂದೊಮ್ಮೆ ನೆಗೆಟಿವ್ ವರದಿ ಇಲ್ಲವಾದಲ್ಲಿ ವ್ಯಾಕ್ಸಿನ್ ಪಡೆದ ಪ್ರಮಾಣ ಪತ್ರ ತೋರಿಸಿದರೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡಲಾಗುತ್ತಿದೆ ಎಂದು ಟಿ ಹೆಚ್ ಒ ಡಾ.ರವಿಕುಮಾರ್ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ವ್ಯಾಕ್ಸಿನ್ ಕಡ್ದಾಯ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.