ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಳಿಕ ಇದೀಗ ಪ್ರತ್ಯೇಕ ಜಿಲ್ಲೆಯ ಕೂಗು ತೀವ್ರಗೊಂಡಿದೆ. ಬೆಳಗಾವಿಯ ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಜಿಲ್ಲಾ ಹೋರಾಟ ಸಮಿತಿ ಆಗ್ರಹಿಸಿದೆ.
ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರ ಈ ಬಾರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಅಧಿವೇಶ ಮುಗಿಯುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸದಿದ್ದರೆ ತೆಲಂಗಾಣ ಮಾದರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಮುಂದೆ ಧರಣಿ ಮಾಡುತ್ತೇವೆ. ಡಿಸೆಂಬರ್ 15ರಂದು ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ಸರ್ಕಾರದ ಗಮನ ಸೆಳೆಯುವುದಲ್ಲದೇ ಡಿಸೆಂಬರ್ 19ರಿಂದ 29ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ನಿರಂತರ ಹೋರಾಟ ನಡೆಸುತ್ತೇವೆ ಎಂದು ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಚಿಕ್ಕೋಡಿ ಭಾಗದ ಜನರು ಪ್ರತಿಯೊಂದು ಕೆಲಸಕ್ಕೂ ಚಿಕ್ಕೋಡಿಯಿಂದ ಬೆಳಗಾವಿಯ ಕೇಂದ್ರ ಭಾಗಕ್ಕೆ ಬರಬೇಕು. ಸಣ್ಣಪುಟ್ಟ ಕೆಲಸಗಳಿಗೂ ಬೆಳಗಾವಿಗೆ ಹೋಗಬೇಕೆಂದರೆ ಈ ಭಾಗದ ಜನರಿಗೆ ಒಂದು ದಿನವೇ ಬೇಕು. ಜನಪ್ರತಿನಿಧಿಗಳೂ ಜನರ ಸಮಸ್ಯೆಗೆ ಗಮನಕೊಡುತ್ತಿಲ್ಲ. ಹಾಗಾಗಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಘೋಷಿಸಿಸಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು ಎಂಬುದು ಈ ಭಾಗದ ಜನರ ಬೇಡಿಕೆ.