ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದರ ಜೊತೆಗೆ ಮೇಲ್ಮನವಿ ಸಲ್ಲಿಸಲು ಅವಕಾಶವನ್ನೂ ನೀಡಲಾಗಿದೆ.
ಇದರ ಮಧ್ಯೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಹೈಕೋರ್ಟ್ ತೀರ್ಪಿನಿಂದಾಗಿ ಗೌರಿಶಂಕರ್ ಸ್ಪರ್ಧಿಸಲು ತೊಡಕುಂಟಾದರೆ ಅವರ ಪತ್ನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದಾರೆ.
ಹೈಕೋರ್ಟ್ ತೀರ್ಪಿನಲ್ಲಿರುವ ಕಾನೂನು ಅಂಶಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲಾಗುತ್ತದೆ. ಒಂದು ವೇಳೆ ಇದರಿಂದಾಗಿ ಗೌರಿಶಂಕರ್ ಸ್ಪರ್ಧಿಸಲು ಸಾಧ್ಯವಾಗದಿದ್ದ ಪಕ್ಷದಲ್ಲಿ ಅವರ ಪತ್ನಿಯನ್ನು ವಿಧಾನಸಭಾ ಚುನಾವಣಾ ಕಣಕ್ಕಿಳಿಸಲಾಗುತ್ತದೆ ಎಂದು ಇಬ್ರಾಹಿಂ ಹೇಳಿದ್ದಾರೆ.