ಚಾಮರಾಜನಗರ: ರಾಜ್ಯಾದ್ಯಂತ ಮಳೆಯಿಂದಾಗಿ ಜನರು ಪರದಾಡುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅವಾಂತರದಿಂದಾಗಿ ಚಾಮರಾಜನಗರದಲ್ಲಿ ಶವ ಹೂಳಲು ಜಾಗವಿಲ್ಲದಾಗಿದೆ ಎಂದು ಯಳಂದೂರು ತಾಲೂಕಿನ ಮಾಂಬಳ್ಳಿಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮಸ್ಥರು ಇದೀಗ ಗ್ರಾಮ ಪಂಚಾಯ್ತಿ ಆವರಣದಲ್ಲಿಯೇ ಗುಂಡಿ ತೋಡಿ ಶವ ಸಂಸ್ಕಾರಕ್ಕೆ ಸಿದ್ಧತೆ ನಡೆಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಜಯಮ್ಮ ಎಂಬುವವರು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮಾಂಬಳ್ಳಿ ಗ್ರಾಮದ ಹೊರ ವಲಯದಲ್ಲಿನ ಸ್ಮಶಾನ ಮಳೆಯಿಂದಾಗಿ ಜಲಾವೃತಗೊಂಡಿದೆ. ಹೀಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಗ್ರಾಮ ಪಂಚಾಯ್ತಿ ಆವರಣದಲ್ಲೇ ಹೆಣ ಹೂಳಲು ಮುಂದಾಗಿದ್ದಾರೆ.