ಜುಲೈ 3 ರಿಂದ 14ರ ವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬುಧವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಈ ವಿಷಯ ತಿಳಿಸಿದ್ದಾರೆ.
ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಬಳಿಕ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಮಾಹಿತಿ ನೀಡಿದರು.
16ನೇ ವಿಧಾನಸಭೆಗೆ 70 ಶಾಸಕರು ಮೊದಲ ಬಾರಿಗೆ ಆಯ್ಕೆಯಾಗಿದ್ದು, ಜೂನ್ 26 ರಿಂದ ಇವರುಗಳಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ಶಿಬಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.