ಮುಂದಿನ ವಿಧಾನಸಭೆಯಲ್ಲಿ ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಮನೆಯಲ್ಲಿಯೂ ಒಬ್ಬರಿಗೆ ಸರ್ಕಾರಿ ಉದ್ಯೋಗ, ವೃದ್ಧರಿಗೆ 5 ಸಾವಿರ ರೂಪಾಯಿ ಮಾಸಿಕ ಪಿಂಚಣಿ, ನಿರಾಶ್ರಿತರಿಗೆ ಮನೆ ಹಾಗೂ ಮಹಿಳೆಯರಿಗೆ ಸಹಾಯಧನ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಯ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಯಾಚೇನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ತಮಿಳುನಾಡು, ಆಂಧ್ರಪ್ರದೇಶಕ್ಕೆ ನೀಡಿದಂತೆ ನಮ್ಮ ರಾಜ್ಯಕ್ಕೆ ಅನುದಾನ ನೀಡುತ್ತಿಲ್ಲ. ಬಿಜೆಪಿ ಸರ್ಕಾರವು ತೆರಿಗೆ ಲೂಟಿ ಮಾಡುತ್ತಿದೆ ಎಂದು ಹೇಳಿದರು.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಶಿಕ್ಷಣ, ವಸತಿ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆಯನ್ನು ತರಲಿದೆ ಎಂದು ಹೇಳಿದರು.