ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದ್ದು, ಇಬ್ಬರು ಆರೊಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯ ವರೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜೈನಮುನಿ ಹತ್ಯೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದರು.
ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅನಿವಾರ್ಯತೆ ಇಲ್ಲ. ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಈಗಾಗಲೇ ನಡೆದಿರುವ ತನಿಖೆಯಿಂದ ಗೊತ್ತಾಗಲಿದೆ ಎಂದರು.
ಆರೋಪಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಜನಪ್ರತಿನಿಧಿಗಳು ಯಾರೂ ಕೂಡ ಈ ರೀತಿ ಮಾತನಾಡಬಾರದು. ಈಗಾಗಲೇ ಡಿವೈಎಸ್ ಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು.