ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ.
ರಮೇಶ್ ಜಾರಕಿಹೊಳಿ ಬೆಂಬಲಿಗರ ತೀವ್ರ ಪ್ರತಿಭಟನೆ, ವಿರೋಧದ ನಡುವೆಯೂ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ, ಡಿಕೆಶಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ ಪೊಲೀಸರು ತಡೆಯೊಡ್ಡಿದ್ದಾರೆ.
ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ
ವಿಮಾನ ನಿಲ್ದಾಣದ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಬೆಂಬಲಿಗರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಇದರಿಂದ ಇನ್ನಷ್ಟು ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರನ್ನೇ ಎಳೆದಾಡಿದ್ದಾರೆ. ಇದೇ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲಿಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಒಟ್ಟಾರೆ ಸಿಡಿ ಪ್ರಕರಣದ ಬೆಳವಣಿಗೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗರ ವಿರೋಧದ ನಡುವೆಯೂ ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಕುಂದಾನಗರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.