ನೂತನ ಸರ್ಕಾರ ರಚನೆಯಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ ಎಂದಿದ್ದರು.
ಉಭಯ ನಾಯಕರ ಭೇಟಿ ಬಳಿಕ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಕ್ಷೇತ್ರದಿಂದ ಅಭ್ಯರ್ಥಿಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ಡಿ.ಕೆ. ಶಿವಕುಮಾರ್ ಹಾಗೂ ನನ್ನ ನಡುವೆ ಲೋಕಸಭಾ ಚುನಾವಣೆ ಸ್ಪರ್ಧೆ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಪಕ್ಷ ಬಲವರ್ಧನೆ ಕುರಿತು ಮಾತನಾಡಿದ್ದೇವೆ. ಅಲ್ಲದೆ ಪಕ್ಷ ನಿಮ್ಮೊಂದಿಗೆ ಇರಲಿದೆ ಎಂದು ಶಿವಕುಮಾರ್ ಭರವಸೆ ನೀಡಿದ್ದಾರೆಂದು ಶೆಟ್ಟರ್ ತಿಳಿಸಿದ್ದಾರೆ.