ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನದ ಕಿಡಿ ಆರಂಭವಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಮಾಜಿ ಡಿಸಿಎಂ, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧವೇ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಪರಮೇಶ್ವರ್ ಅಸಮಾಧಾನ ಶಮನಗೊಳಿಸುವ ನಿಟ್ಟಿನಲ್ಲಿಯೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕರೆದು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ. ಇಷ್ಟಕ್ಕೂ ಪರಮೇಶ್ವರ್ ಅವರ ಅಸಮಾಧಾನಕ್ಕೆ ಕಾರಣ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿರುವ ತಮ್ಮ ಗಮನಕ್ಕೆ ತರದೇ ಎರಡು ಮಹತ್ವದ ಭಾರವಸೆಗಳನ್ನು ಘೋಷಿಸಿದ್ದು. ಉಚಿತ ವಿದ್ಯುತ್ ಹಾಗೂ ಮಹಿಳೆಯರಿಗೆ ಮಾಸಿಕ 2000 ಸಹಾಯಧನ ಘೋಷಣೆ ಮಾಡಿರುವುದು ಪರಮೇಶ್ವರ್ ಅವರ ಮುನಿಸಿಗೆ ಕಾರಣವಾಗಿದೆ.
ತಮ್ಮ ಗಮನಕ್ಕೆ ತರದೇ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರಣಾಳಿಕೆಯ ಅಂಶಗಳನ್ನು ಒಂದೊಂದಾಗಿ ಘೋಷಣೆಗಳನ್ನು ಮಾಡುತ್ತಾ ಬರುತ್ತಿರುವುದು ಇರಿಸುಮುರಿಸಿಗೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಂಡಾಯ ಸಾರಲು ಪರಮೇಶ್ವರ್ ಮುಂದಾಗಿದ್ದಾರೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿಗೂ ಚರ್ಚಿಸಲು ತೀರ್ಮಾಸಿದ್ದರು. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರನ್ನು ಕರೆದು ಸುರ್ಜೇವಾಲಾ ಸಾಮಾಧಾನ ಪಡಿಸಿದ್ದು, ಭಿನ್ನಾಭಿಪ್ರಾಯ ಶಮನಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.