ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಹೊಸ ದಾಖಲೆ ಬರೆದಿದೆ. ಬಿಜೆಪಿ ಭರ್ಜರಿ ಗೆಲುವು ಪಡೆಯುತ್ತಿದ್ದಂತೆ ಭೂಪೇಂದ್ರ ಪಟೇಲ್ 2ನೇ ಬಾರಿಗೆ ಅಧಿಕಾರಕ್ಕೇರಲು ಮುಹೂರ್ತ ನಿಗದಿಯಾಗಿದೆ.
ಗುಜರಾತ್ ನಲ್ಲಿ ಬಿಜೆಪಿ 156 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 16, ಆಪ್ 5 ಹಾಗೂ ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಬಿಜೆಪಿ ಐತಿಹಾಸಿಕ ಗೆಲುವು ಖಚಿತವಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್, ಡಿಸೆಂಬರ್ 12ರಂದು ಗುಜರಾತ್ ಮುಖ್ಯಮಂತ್ರಿಗಳ ಪ್ರಮಾಣವಚನ ಸಾಮಾರಂಭ ನಿಗದಿಯಾಗಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ 12ರಂದು ಮಧ್ಯಾಹ್ನ 2ಗಂಟೆಗೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಭೂಪೆಂದ್ರ ಪಟೇಲ್ 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.