ದಾವಣಗೆರೆ: ರಾಮನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ. ಸಹೋದರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯ ಹೊನ್ನಾಳಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗಿದ್ದು, ಡಿ.ಕೆ. ಸುರೇಶ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್, ಬಾಡಿಗೆ ಗೂಂಡಾಗಳನ್ನು ಬಿಟ್ಟು ಗಲಾಟೆ ಮಾಡಿಸುತ್ತಿದ್ದಾರೆ ಮೊದಲು ಡಿ.ಕೆ. ಸುರೇಶ್ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದರು.
ನಾವ್ಯಾರು ಬಳೆ ತೊಟ್ಟುಕೊಂಡಿಲ್ಲ. ಕ್ಷಮೆ ಯಾಚಿಸದಿದ್ದರೆ ಬೆಂಗಳೂರಿಗೆ ಆಗಮಿಸಿ ತಕ್ಕ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು.