ತುಮಕೂರು: ವೈದ್ಯರ ನಿರ್ಲಕ್ಷಕ್ಕೆ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದ್ದಾರೆ.
ತುಮಕೂರಿನ ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ 30 ವರ್ಷದ ಕಸ್ತೂರಿ ಎಂಬ ಬಾಣಂತಿ ಹಾಗೂ ಆಗತಾನೆ ಜನಿಸಿದ್ದ ಅವಳಿ ಗಂಡು ಮಕ್ಕಳು ಸಾವನ್ನಪ್ಪಿದ್ದರು. ಮೂವರ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿರುವ ಡಿ ಹೆಚ್ ಒ, ಡಾ.ಮಂಜುನಾಥ್, ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರಿನ ಭಾರತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಕಸ್ತೂರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಆಕೆಯನ್ನು ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತದಿದ್ದರು. ಆದರೆ ಮಹಿಳೆ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂದು ಆಸ್ಪತ್ರೆಗೆ ದಾಖಲಿಸಿಕೊಳ್ಳದೇ ವೈದರು ನಿರ್ಲಕ್ಷ್ಯ ಮೆರೆದಿದ್ದರು. ಗರ್ಭಿಣಿ ಕಸ್ತೂರಿ ಇಂದು ಬೆಳಿಗ್ಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಸೂಕ್ತ ಚಿಕಿತ್ಸೆ ಇಲ್ಲದೇ ಕೆಲ ಸಮಯದಲ್ಲೇ ತೀವ್ರ ರಕ್ತಸ್ರಾವದಿಂದ ಮಹಿಳೆ ಹಾಗೂ ಅವಳಿ ಗಂಡು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು.