ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.
ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಲ್ಲದೆ ಇದಕ್ಕಾಗಿ ಅವರು ಈ ಕ್ಷೇತ್ರಗಳ ಹಿಂದೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಹ ನಡೆಸಿದ್ದರು.
ಇದೀಗ ತಾವು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ದು, ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಸ್ಪರ್ಧೆ ನೀಡಲಿದ್ದಾರೆ. ಅಲ್ಲದೆ ಶ್ರೀರಾಮ ಸೇನೆ ವತಿಯಿಂದ ಕೆಲವೊಂದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸಹ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.