ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಇಡಿ ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಕಿರಿಕುಳ ನೀಡುತ್ತಿದೆ. ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ದೆಹಲಿಯಲ್ಲಿ ಒಂದೆಡೆ ಸಂಸತ್ ಭವನದ ಎದುರು ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಎಐಸಿಸಿ ಕಚೇರಿ ಎದುರು ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ. ರಾಷ್ಟ್ರಪತಿ ಭವನದತ್ತ ಸಾಗಿದ ಕಾಂಗ್ರೆಸ್ ಸಂಸದರು ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ರಸ್ತೆ ಮಧ್ಯೆಯೇ ಧರಣಿ ಕುಳಿತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ, ನೂಕಾಟ ತಳ್ಳಾಟ ಆರಂಭವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸಂಸದ ರಾಹುಲ್ ಗಾಂಧಿ, ದಿಪೇಂದ್ರರ್ ಹೂಡಾ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.