ನವದೆಹಲಿ: ತುಮಕೂರಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಡಿದ್ದಾರೆ. ಅಪಘಾತ ದುರಂತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಇದೇ ವೇಳೆ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಂಬನಿ ಮಿಡಿದಿರುವ ಪ್ರಧಾನಿ, ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ತುಮಕೂರಿನ ಕಳ್ಳಂಬೆಳ್ಳ ಬಳಿ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಟೆಂಪೋ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದರು. 15 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 4:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.