ಬೆಂಗಳೂರು: ನಟ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರೇ ನಿಜವಾಗಿ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದ ವ್ಯಕ್ತಿ ಎಂದರು.
ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು. ಎಲ್ಲರಿಗೂ ಪ್ರೇರಣೆಯಾಗಬೇಕು ಎಂಬ ಕಾರಣಕ್ಕೆ ಕರ್ನಾಟಕ ರತ್ನ ಪುರಸ್ಕಾರ ನೀಡಲಾಗುತ್ತಿದೆ. ನ.1ರಂದು ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶ್ರೇಷ್ಠ ಸಾಹಿತಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನವೆಂಬರ್ 1ರಿಂದ ಬೆಂಗಳೂರಿನಲ್ಲಿ 10ದಿನಗಳ ಕಾಲ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.