ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಸಮಸ್ಯೆಗೂ ಬಿಜೆಪಿಯಲ್ಲಿನ ಸಮಸ್ಯೆಗೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಯಾವುದೇ ರೇಸ್ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರೇ ಮತ್ತೆ ಸಿಎಂ ಆಗಬೇಕು ಎಂಬ ಕೈ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧರಿಸುತ್ತಾರೆ. ನನಗೇನು ಅರ್ಜೆಂಟ್ ಇಲ್ಲ. ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದರು.
ಕಾಂಗ್ರೆಸ್ ನಲ್ಲಿ ಯಾವುದೇ ಕುರ್ಚಿ ಖಾಲಿಯಿಲ್ಲ. ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಮೊದಲು ಚುನಾವಣೆಗಳನ್ನು ಗೆಲ್ಲಲಿ. ರಾಜ್ಯದ ಜನತೆ ಬದಲಾವಣೆ ಬಯಸುತ್ತಿದ್ದಾರೆ ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದು ಹೇಳಿದರು.