ಬೆಂಗಳೂರು: ಕಾಂಗ್ರೆಸ್ ಪಕ್ಷದ ವಾರಂಟಿಯೆ ಎಕ್ಸ್ ಪೈರ್ ಆಗಿದೆ. ಈಗ ಗ್ಯಾರಂಟಿ ಯೋಜನೆ ಬಗ್ಗೆ ಭರವಸೆ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದ ಪ್ರಧಾನಿ ಮೋದಿ ಮಾತಿಗೆ ಟಾಂಗ್ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಅವರು ಆತಂಕ ಪಡುವುದು ಬೇಡ ಎಂದಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ್, ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸೋಲು ಖಚಿತ ಎಂಬುದು ಗೊತ್ತಾಗಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹತಾಶರಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದರು.
ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತಗಳನ್ನು ಪಡೆದು ಅಧಿಕಾರಕ್ಕೆ ಬರಲಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿಯವರು ಆತಂಕ ಪಡುವುದು ಬೇಡ. ನಾವು ಅಧಿಕಾರಕ್ಕೆ ಬರುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೆ ತರುತ್ತೇವೆ. ಇಲ್ಲದೇ ಹೋದರೆ ನಾವು ಮುಂದೆ ವೋಟ್ ಕೇಳೋದಿಲ್ಲ ಎಂದು ಹೇಳಿದರು.