ಬೆಂಗಳೂರು: ಐದು ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಕಟವಾಗಿಲ್ಲ. ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಉತ್ತರಾಖಂಡ್ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಪಂಜಾಬ್ ನಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೆ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ಹೇಳಿದರು.
ಪಂಜಾಬ್ ನಲ್ಲಿ ಅಧಿಕಾರಕ್ಕೆ ಬಂದಿರುವುದು ಆಮ್ ಆದ್ಮಿ ಪಕ್ಷ, ಬಿಜೆಪಿಯಲ್ಲ. ಹಾಗಾಗಿ ಈ ಚುನಾವಣೆ ಫಲಿತಾಂಶದಿಂದ ನಾವು ಧೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ. ಅಧಿಕಾರ ಇದ್ದ ರಾಜ್ಯದಲ್ಲಿ ಬಿಜೆಪಿ ಗೆದ್ದಿದೆ ಅಷ್ಟೆ. ಹಾಗಂತ ಬಹಳ ಜಂಬ ಪಡುವ ಅಗತ್ಯವಿಲ್ಲ ಎಂದು ಹೇಳಿದರು.