ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಶಾಸಕ ಎಸ್.ಎ.ರಾಮದಾಸ್, ನಮ್ಮದೇ ಸರ್ಕಾರವಿದ್ದರೂ ಭಾರತದ ರಕ್ಷಣೆಗಾಗಿ ಹೋರಾಡಬೇಕಾಗಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ರಾಮದಾಸ್, ಬಿಜೆಪಿ ಯುವ ಮುಖಂಡನ ಹತ್ಯೆ ನಡೆದಿದೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸಾವನ್ನಪ್ಪುತ್ತಿದ್ದಾರೆ. ರಾಜ್ಯದಲ್ಲಿ ಜನರಿಗೆ ರಕ್ಷಣೆ ಇಲ್ಲದ ಸ್ಥಿತಿ. ನಮ್ಮ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದಾಗಲೂ ನಮ್ಮವರ ಉಳಿವಿಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ಬಂದಿರುವುದು ಕಳವಳಕಾರಿ ಎಂದು ಬೇಸರ ವ್ಯಕ್ತಪಡಿಸಿದರು.
ಭಾರತದ ಉಳಿವಿಗಾಗಿ ನಾವು ಹೋರಾಟ ನಡೆಸುತ್ತಿದ್ದೇವೆ. ಭಾರತ ಖಲಿಸ್ತಾನ, ಪಾಕಿಸ್ತಾನ, ಅಪ್ಘಾನಿಸ್ತಾನದಂತಾಗುವುದು ಬೇಡ ಎಂಬುದು ನಮ್ಮ ಮನವಿ ಎಂದು ಹೇಳಿದರು.