ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾಗಿದ್ದು, ಈ ವೇಳೆ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆ ಪ್ರಕರಣಗಳ ಬಗ್ಗೆ ಕಾರಣ ಕೇಳಿದರು. ನಿಮ್ಮದೇ ಲೋಕಸಭಾ ಕ್ಷೇತ್ರದಲ್ಲಿ 10 ದಿನಗಳ ಅಂತರದಲ್ಲಿ 3 ಕೊಲೆಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಘಟನೆ ತಡೆಯುವಲ್ಲಿ ವಿಫಲರಾಗಿದ್ದೀರಿ ಎಂದು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ನೀವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸರಣಿ ಹತ್ಯೆಗಳು ನಡೆದಿವೆ. ನೀವು ಸಂಸದರು ಮಾತ್ರವಲ್ಲ, ರಾಜ್ಯಾಧ್ಯಕ್ಷರು ಎಂಬುದು ನೆನಪಿರಲಿ. ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಜವಾಬ್ದಾರಿ ಯಾರು? ಇದಕ್ಕೆ ನಿಮ್ಮ ಉತ್ತರವೇನು? ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಿಮ್ಮ ಶ್ರಮವೇನು? ಎಂದು ಸಾಲು ಸಾಲು ಪ್ರಶ್ನೆಗಳ ಮೂಲಕ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.