ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಈ ಹಿಂದಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘದಿಂದ ಡಿಸೆಂಬರ್ 19 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಮಾಡು ಇಲ್ಲವೇ ಮಡಿ’ ಹೋರಾಟ ನಡೆಸಲು ಸಿದ್ಧತೆ ನಡೆಸಲಾಗಿದೆ.
ಇದಕ್ಕೆ ಪೂರ್ವಭಾವಿಯಾಗಿ ಇಂದು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ‘ಮಾಡು ಇಲ್ಲವೇ ಮಡಿ’ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತದೆ.
ಎನ್.ಪಿ.ಎಸ್. ಜಾರಿಯಾಗಿ 16 ವರ್ಷಗಳಾಗಿದ್ದು, ಹಳೆ ಪಿಂಚಣಿ ಯೋಜನೆಯ ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದರೂ ಯಾವುದೇ ಸ್ಪಂದನ ಸಿಕ್ಕಿಲ್ಲ ಎಂಬುದು ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಆರೋಪವಾಗಿದೆ. ಹೀಗಾಗಿ ಅಂತಿಮವಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟಕ್ಕೆ ನಿರ್ಧರಿಸಲಾಗಿದೆ.