ಗದಗ: ಭಾರಿ ಮಳೆಯಿಂದಾಗಿ ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು ನೀರಿನ ರಭಸಕ್ಕೆ ಇಬ್ಬರು ಪೊಲೀಸ್ ಸಿಬ್ಬಂದಿಗಳೇ ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ನಡೆದಿದೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಕಾನ್ಸ್ಟೇಬಲ್ ಗಳಾದ ಮಹೇಶ್ ಹಾಗೂ ನಿಂಗಪ್ಪ ಎಂಬುವವರು ಗಜೇಂದ್ರಗಡದಿಂದ ವಾಪಸ್ ಆಗುತ್ತಿದ್ದ ವೇಳೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.
ಗಜೇಂದ್ರಗಡದಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಭದ್ರತೆಗಾಗಿ ಮುಂಡರಗಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಹೇಶ್ ಹಾಗೂ ನಿಂಗಪ್ಪ ಅವರನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆ ಮುಗಿದ ಬಳಿಕ ವಾಪಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.