ಬೆಂಗಳೂರು: ನೂತನ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ (ಭೀಮನಗೌಡ ಸಂಗನಗೌಡ ಪಾಟೀಲ್) ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಲ್ಲಿ ಲೋಕಾಯುಕ್ತರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಕಳೆದ 5 ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿಯಿತ್ತು. ಇದೀಗ ಲೋಕಾಯುಕ್ತರ ನೇಮಕಕ್ಕೆ ರಾಜ್ಯ ಸರ್ಕಾರ ಮಾಡಿದ ಶಿಫಾರಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಉಪ ಲೋಕಾಯುಕ್ತರಾಗಿದ್ದ ಬಿ.ಎಸ್. ಪಾಟೀಲ್ ಅವರನ್ನು ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇದೀಗ 8ನೇ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಬಿ.ಎಸ್. ಪಾಟೀಲ್ ಅಧಿಕಾರ ಸ್ವೀಕರಿಸಿದ್ದಾರೆ.