ಬೆಂಗಳೂರು; ಪ್ರವಾದಿ ಪೈಗಂಬರ್ ಕುರಿತು ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಮುಂಬೈ, ಉತ್ತರಪ್ರದೇಶ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮುಸ್ಲಿಂ ಮುಖಂಡರು ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯದಲ್ಲಿಯೂ ಧರಣಿ, ಪ್ರತಿಭಟನೆಗಳು ಭುಗಿಲೆದ್ದಿವೆ.
ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು, ಯಾದಗಿರಿ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನ ಮಿಲಾದ್ ಪಾರ್ಕ್ ಬಳಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ, ಯಾದಗಿರಿಯಲ್ಲಿ ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನಾ ನಿರತ ಮುಸ್ಲಿಂ ಕಾರ್ಯಕರ್ತರು ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ಕೇಬಲ್ ತಂತಿಗೆ ನೇತುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಒತ್ತಾಯಿಸಿ ಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.