ಬೆಳಗಾವಿ: ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡದಿದ್ದರೆ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಸಿಎಂ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಬೆಳಗಾವಿ ನಗರ ತಲುಪಿದ್ದು, ಸುವರ್ಣ ವಿಧಾನಸೌಧದ ಬಳಿ ಸಮಾವೇಶಗೊಂಡಿದ್ದಾರೆ. ಸಂಪುಟ ಸಭೆಯಲ್ಲಿ ಮೀಸಲಾತಿ ಪರವಾಗಿ ನಿರ್ಣಯಗಳು ಬರುವ ನಿರೀಕ್ಷೆಯಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಘೋಷಿಸಿ ಸಿಎಂ ಸನ್ಮಾನ ಮಾಡಿಸಿಕೊಳ್ಳುತ್ತಾರೋ ಅಥವಾ ಬಂಡಾಯ ಎದುರಿಸುತ್ತಾರೋ ಎಂಬುದು ಸಿಎಂ ಕೈಯಲ್ಲಿಯೇ ಇದೆ. ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ. ಏನು ಬೇಕಾದರೂ ಆಗಲಿ ಜಾಗದಿಂದ ಕದಲಲ್ಲ ಎಂದಿದ್ದಾರೆ.
ಮೀಸಲಾತಿ ಘೋಷಿಸಿದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕಲ್ಲುಸಕ್ಕರೆ ತುಲಾಭಾರ ಮಾಡುತ್ತೇವೆ. ಇಲ್ಲವಾದಲ್ಲಿ ಹರ್ ಹರ್ ಮಹಾದೇವ್ ಎಂದು ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.