ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಹಾಗೂ ನೇಮಕಾತಿ ಆದೇಶಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಒಂದೆಡೆ ಗ್ಯಾರಂಟಿ ಯೋಜನೆಗಳ ಜಾರಿಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ಆರ್ಡರ್ ಗಾಗಿ ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಅಭ್ಯರ್ಥಿಗಳು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆರಂಭಿಸಿದ್ದು, ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 13,000ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದರೂ ಅವರಿಗೆ ನೇಮಕಾತಿ ಆದೇಶ ಸಿಗದೇ ವಿಳಂಬವಾಗುತ್ತಿದೆ. ಪರೀಕ್ಷೆ ನಡೆದು ಒಂದು ವರ್ಷ ಕಳೆದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಇನ್ನು ಸ್ಥಳ ನಿಯೋಜನೆ, ನೇಮಕಾತಿ ಆದೇಶ ಪತ್ರ ಸಿಕ್ಕಿಲ್ಲ. ಇದರಿಂದಾಗಿ ಅಭ್ಯರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಈ ಅಭ್ಯರ್ಥಿಗಳು ನೇಮಕಾತಿ ಪಟ್ಟಿಯಲ್ಲಿ ಆಯ್ಕೆಯಾದ ಹಿನ್ನೆಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಕೆಲಸದಿಂದ ತೆಗೆದು ಹಾಕಿವೆ. ಮೂಲ ದಾಖಲಾತಿಗಳನ್ನು ಶಿಕ್ಷಣ ಇಲಾಖೆಗೆ ನೀಡಿರುವುದರಿಂದ ಬೇರೆಡೆ ಕೆಲಸಕ್ಕೆ ಸೇರುವುದು ಕಷ್ಟವಾಗಿದೆ. ಇರುವ ಉದ್ಯೋಗವೂ ಕಳೆದುಕೊಂಡು, ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಾತಿಯೂ ಇಲ್ಲದೇ ಕುಟುಂಬ ನಿರ್ವಹಣೆಯೂ ಕಷ್ಟಕರವಾಗಿದೆ ಎಂದು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಸ್ಥಳ ನಿಯೋಜನೆ, ನೇಮಕಾತಿ ಆದೇಶ ಹೊರಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.