ಕಾರವಾರ: ಪರೇಶ್ ಮೆಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 122 ಜನರ ವಿರುದ್ದ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಯುವಕ ಪರೇಶ್ ಮೆಸ್ತಾ 2017ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಕೋಮು ಸಂಘರ್ಷ ಭುಗಿಲೆದ್ದಿತ್ತು. ಪರೇಶ್ ಮೆಸ್ತಾನದ್ದು ಕೊಲೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಹತ್ಯೆ ಪ್ರಕರಣ ಖಂಡಿಸಿ ಅಂದಿನ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿ 122 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಕಾಗೇರಿ, ಬಿಜೆಪಿ ಕಾರ್ಯಕರ್ತರು ಸೇರಿ 122 ಜನರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಆದೇಶ ಹೊರಡಿಸಿದೆ.